Prajapath

ಮುಖ್ಯಾಂಶಗಳು

ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ

Spread the love

ವಿಶ್ವ ರಕ್ತದಾನಿಗಳ ದಿನಾಚರಣೆ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ಅಭಿಮತ

 

ಪ್ರಜಾಪಥ ವಾರ್ತೆ

ಕುಶಾಲನಗರ (ಕೊಡಗು): ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜ್ಞಾನ ಕಾವೇರಿ ಕ್ಯಾಂಪಸ್, ಕೊಡಗು ವಿಶ್ವವಿದ್ಯಾಲಯ ಚಿಕ್ಕ ಅಳುವಾರದಲ್ಲಿ ಶುಕ್ರವಾರ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು.

ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು 20 ವರ್ಷಗಳಿಂದ ಆಚರಿಸುತ್ತಾ ಬಂದಿದ್ದು, ನಿರಂತರವಾಗಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸಿದರು.

ರಕ್ತದಾನದ ಬಗ್ಗೆ ಸ್ಪಷ್ಟತೆಯನ್ನು ಪಡೆಯುವಂತೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಕ್ರಮವಹಿಸುವ ಬಗ್ಗೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ರಕ್ತದ ಅವಶ್ಯಕತೆ ಇರುವ ಬಗ್ಗೆ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್‌ಲೇಟ್‌ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಹೇಳಿದರು.

ರಕ್ತದ ಅವಶ್ಯಕತೆ ಹಾಗೂ ರಕ್ತದಾನದ ಮಹತ್ವ ಮತ್ತು ಉಪಯೋಗಗಳ ಕುರಿತು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ  ಡಾ.ಕರುಂಬಯ್ಯ ಅವರು ಅರಿವು ಮೂಡಿಸಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಸೀನಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ರಕ್ತದ ಕೊರತೆಯಾಗಬಾರದು. ರಕ್ತದ ಅವಶ್ಯಕತೆ ಇದ್ದಾಗ ತಾವು ಕೈಜೋಡಿಸುವುದಾಗಿ ತಿಳಿಸಿದರು. ಕುಲಸಚಿವರಾದ ಡಾ.ಸೀನಪ್ಪ ಅವರು ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ದಿನ ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸಿದ ದಾನಿಗಳು ಶ್ರೇಷ್ಠರು. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸುವಂತಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ, ಐಸಿಟಿಸಿ ಆಪ್ತ ಸಮಾಲೋಚಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ರಕ್ತದಾನ ಮಾಡಿದರು.

ಎಂ.ಎ.ವಿದ್ಯಾರ್ಥಿ ಅಮೃತ್‌ರಾಜ್ ಅವರು ಪ್ರಾರ್ಥಿಸಿದರು. ಕೊಡಗು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಜಮೀರ್ ಅಹಮದ್ ಅವರು ಸ್ವಾಗತಿಸಿದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಸುದರ್ಶನ್ ಕುಮಾರ್ ಅವರು ವಂದಿಸಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!