ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

Spread the love

ಪ್ರಜಾಪಥ ವಾರ್ತೆ
ಗದಗ : ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್ನಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉದ್ಬವಿಸಿದಂತೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬೇಸಿಗೆ ಮುಗಿಯುವವರೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಅಲ್ಲದೇ ಜಿಲ್ಲೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವದರ ಜೊತೆಗೆ ಸಮರ್ಪಕ ನೀರು ಸರಬರಾಜಿನಲ್ಲಿ ಯಾವುದೇ ಲೋಪ ಹಾಗೂ ಸೋರಿಕೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು. ಬೇಸಿಗೆ ಕಾಲ ಮುಕ್ತಾಯವಾಗುವವರೆಗೆ ನೀರಿನ ಸರಬರಾಜು ಹಾಗೂ ಪೂರೈಕೆಗೆ ವ್ಯತ್ಯಯವಾಗದಂತೆಅಗತ್ಯದ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ ಮಾತನಾಡಿ ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿ ಕುರಿತಂತೆ ಈಗಾಗಲೇ ಅಂತಿಮ ಮತದಾರ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು ಸದರಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಅರ್ಹ ಶಿಕ್ಷಕರು ಬಾಕಿ ಉಳಿದಿದ್ದಲ್ಲಿ ನಿರಂತರ ಪರಿಷ್ಕರಣೆಯಡಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅವಕಾಶವಿದೆ. ಅಂತಿಮ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ತಹಶೀಲ್ದಾರರು ಪರಿಷ್ಕರಣೆಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ ನುಚ್ಚಿನ್, ಡಿಡಿಎಲ್ಆರ್ ರವಿಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ಮೇಲ್ಮನಿ ಸೇರಿದಂತೆ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *